“ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದರ ಜತೆ ಜತೆಯಲ್ಲೇ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡಲು ಸರಕಾರ ಮುಂದಾಗಿದೆ” ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿರುವ ಕ್ರಾಫರ್ಡ್ ಹಾಲ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಅನಾವರಣ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅತ್ಯುತ್ತಮವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕವಾಗಿ ಸ್ವಾಯತ್ತತೆ ನೀಡುವುದರ ಜತೆಗೆ, ಗುಣಮಟ್ಟದ ಶಿಕ್ಷಣ ನೀಡಿಕೆಯಲ್ಲಿ ಆಯಾ ಸಂಸ್ಥೆಯನ್ನೇ ಉತ್ತರದಾಯಿಯನ್ನಾಗಿ ಮಾಡಲಾಗವುದು ಹಾಗೂ ಆಯಾ ಪ್ರದೇಶದ ನಾಗರಿಕರು, ಉದ್ದಿಮೆದಾರರು, ಹಳೆಯ ವಿದ್ಯಾರ್ಥಿಗಳು ಆಯಾ ಸಂಸ್ಥೆಗೆ ಶಕ್ತಿ ತುಂಬಬೇಕು ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.
ಶಿಕ್ಷಣ ಸಂಸ್ಥೆಗಳು ಸಮಾಜದ, ಜನರ ಆಸ್ತಿ. ಅವುಗಳನ್ನು ಜನರೇ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಜನರ ನೇತತ್ವದಲ್ಲಿಯೇ ನಾವು ಮುನ್ನಡೆಯಬೇಕು ಎಂದ ಅವರು, ಈಗಾಗಲೇ ಕೆಲ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.