ಕರ್ನಾಟಕದಲ್ಲಿ ಮತ್ತೊಂದು ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ತಯಾರಿ ನಡೆದಿದೆ. ಕರ್ನಾಟಕ ಸರ್ಕಾರ ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಇದೆ.

ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗುತ್ತದೆ. ಅರಣ್ಯ ಇಲಾಖೆ ಈ ಕುರಿತು ಅಧಿಕೃತ ಘೋಷಣೆ ಮಾಡಲು ತಯಾರಿ ನಡೆಸುತ್ತಿದೆ. ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಪ್ರಸ್ತುತ ಮಲೆ ಮಹದೇಶ್ವರ ವನ್ಯಧಾಮದಲ್ಲಿ 18 ರಿಂದ 24 ಹುಲಿಗಳಿವೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ಕಳೆದ ವರ್ಷವೇ ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಿ ಒಪ್ಪಿಗೆ ಕೊಟ್ಟಿದೆ.
ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ 18 ಕಂದಾಯ ಗ್ರಾಮಗಳಿವೆ. ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಹ ಇದೇ ವನ್ಯಧಾಮದಲ್ಲಿ ಹಾದು ಹೋಗುತ್ತದೆ. ವನ್ಯಧಾಮದ ವ್ಯಾಪ್ತಿಯಲ್ಲಿ ಈಗಾಗಲೇ ಅಭಿವೃದ್ಧಿ ಚಟುವಟಿಕೆಗಳಿಗೆ ನಿರ್ಬಂಧವಿದೆ. ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆಯಾದರೆ ಸ್ಥಳೀಯರು ಮತ್ತು ಮೂಲ ನಿವಾಸಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ಹಕ್ಕುಗಳು ಮತ್ತು ಸೌಲಭ್ಯಗಳು ಎಂದಿನಂತೆ ಇರಲಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.