ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಹಾಸನ ತಾಲ್ಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ.
ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ಭಾಷಣ ಮಾಡುತ್ತಿದ್ದ ವೇಳೆ, ಇಷ್ಟು ದಿನ ಎಲ್ಲಿ ಹೋಗಿದ್ದೀರಿ ಎಂದು ಉದ್ದೂರು ಗ್ರಾಮದ ರಾಜೇಗೌಡ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ.
ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಘರ್ಷಣೆ ವೇಲೆ ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದ್ದು, ಎರಡು ಕಡೆಯವರು ದೂರು ಕೊಡಲು ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಎದುರು ಜಮಾವಣೆಯಾದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಹಾಸನ ತಾಲ್ಲೂಕಿನ ಉದ್ದೂರು ಗ್ರಾಮದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.