ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವ ಸಿಸಿ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಹೇಳಿಕೆಯು ಈವರೆಗೆ ರಾಜ್ಯದಲ್ಲಿ ಹಲವು ಗೊಂದಲಗಳಿಗೆ ತೆರೆ ಎಳೆದಿದ್ದು ರಸ್ತೆಗಳಿಂದ ಎಷ್ಟು ಅಂತರದಲ್ಲಿ ಕಟ್ಟಡ ನಿರ್ಮಿಸಿದರೆ ಅದು ಅಧಿಕೃತ ನಿರ್ಮಾಣ ಎನ್ನಿಸಿಕೊಳ್ಳುತ್ತದೆ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡಿದೆ. ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಪ್ರಮಾಣದ ಅಂತರ ಕಾಯ್ದುಕೊಳ್ಳಲೇ ಬೇಕು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಅದೇ ರೀತಿ ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ ಎಂದು ಈ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಲಾಗಿದೆ.
ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿಮೀ ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.