ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗಾಗಿ ಎಲ್ಲ ಹಂತಗಳ ಆಸ್ಪತ್ರೆಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.
ಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಉಲ್ಲೇಖಗಳ ಅನ್ವಯ ಸಮಗ್ರ ಕ್ರಿಯಾ ಯೋಜನೆಯು ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರಬೇಕು. ಅಗತ್ಯ ಮಾನವ ಸಂಪನ್ಮೂಲ, ಟೆಸ್ಟಿಂಗ್ ಕಿಟ್, ಔಷಧಗಳು, ರಾಸಾಯನಿಕ ಉಪಕರಣಗಳು ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳು ಅಗತ್ಯ ಪ್ರಮಾಣದಲ್ಲಿ ಲಭ್ಯವಿರಬೇಕು. ಸಾಮಾನ್ಯವಾಗಿ ಪ್ರವಾಹವು ಕಡಿಮೆಯಾಗುವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಯು ಸಾಮಾನ್ಯವಾಗುವರೆಗೂ ಸರ್ವೇಕ್ಷಣೆ ಹಾಗೂ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಗತ್ಯವಾಗಿದೆ. ಒಟ್ಟಾರೆಯಾಗಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅಗತ್ಯ ಪ್ರಯತ್ನಗಳನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಂದೀಪ್ ಡಿ. ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.