ಬೆಂಗಳೂರು: ಸ್ಪೀಕರ್ ಪೀಠದ ಕುರಿತು ಸಚಿವ ಜಮೀರ್ ಅಹ್ಮದ್ ಅವರು ಆಡಿದ ಮಾತನ್ನು ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದೆ.
ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಪ್ಪುಚುಕ್ಕಿ ಇಡುವ ರೀತಿಯಲ್ಲಿ ಜಮೀರ್ ಅಹ್ಮದ್ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಒತ್ತಾಯಿಸಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಡಿಸೆಂಬರ್ 2, 3 ಅಥವಾ ಸದನ ನಡೆಯುವಾಗಲೇ 4ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಚಿವ ಜಮೀರ್ ಅಹ್ಮದ್ ಅವರು ಮಂತ್ರಿಯಾಗಿ ಮುಂದುವರಿಯಲು ಯೋಗ್ಯರಲ್ಲ. ಆ ಕಾರಣದಿಂದ ಅವರು ಬೆಳಗಾವಿಯಲ್ಲಿ ನಡೆಯುವ ಸದನಕ್ಕೆ ಅವರು ಹಾಜರಾಗಬಾರದು ಎಂದು ಆಗ್ರಹಿಸಿದರು.