ಬೆಂಗಳೂರು: ಪ್ರಧಾನ ಮಂತ್ರಿಗಳ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಹಳ ಪ್ರಮುಖವಾದ ನಗರ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಆದಾಯ ನೀಡುತ್ತಿರುವ ನಗರ. ವಿಶ್ವದ ನಾಯಕರು ಹಾಗೂ ವಿಶ್ವದ ಹೂಡಿಕೆದಾರರು ಬೆಂಗಳೂರಿನ ಮೇಲೆ ಆಸಕ್ತಿ ಹೊಂದಿದ್ದಾರೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಅನೇಕ ಮೂಲಭೂತ ಸೌಕರ್ಯ ಯೋಜನೆಗಳನ್ನು ನೀಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ವಿಮಾನ ನಿಲ್ದಾಣ ಮೇಲ್ಸೇತುವೆ,
ನೆಲಮಂಗಲ ಮೇಲ್ಸೆತುವೆ ಯೋಜನೆಗಳನ್ನು ನೀಡಲಾಗಿತ್ತು. ಈಗ ಜನಸಂಖ್ಯೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆಗೆ ಮಿಲಿಟರಿ ಭೂಮಿ ಬೇಕಾಗಿದೆ. ಅದನ್ನು ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಈ ವಿಚಾರವಾಗಿ ರಕ್ಷಣಾ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ್ದೇವೆ. ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಇದರ ಜತೆಗೆ ಈ ಹಿಂದೆ ಬಜೆಟ್ ನಲ್ಲಿ ಘೋಷಣೆಯಾಗಿರುವ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿ ಪರಿಶೀಲಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದರು.