ಕ್ರಿಕೆಟಿಗ ಶಿಖರ್ ಧವನ್ ಶನಿವಾರ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಎಲ್ಲ ಬಗೆಯ ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತರಾಗುತ್ತಿರುವುದಾಗಿ ಅವರು ಪ್ರಕಟಿಸಿದ್ದಾರೆ.
ಗಬ್ಬರ್ ಸಿಂಗ್ ಎಂದೇ ಫೇಮಸ್ ಆಗಿದ್ದ ಧವನ್, ಹಲವು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಧವನ್, ‘ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಮುಕ್ತಾಯಗೊಳಿಸುತ್ತಿದ್ದೇನೆ. ನಾನು ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ನನ್ನೊಂದಿಗೆ ಒಯ್ಯುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್!’ ಎಂದು ಬರೆದುಕೊಂಡಿದ್ದಾರೆ
ತಮ್ಮ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ‘ಸಂಪೂರ್ಣ ಕಥೆಯನ್ನು ಓದಲು ನೀವು ಪುಟವನ್ನು ತಿರುಗಿಸಬೇಕು ಎಂಬ ಮಾತಿದೆ. ಅದನ್ನೇ ನಾನು ಮಾಡಲಿದ್ದೇನೆ. ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ನನ್ನ ವೃತ್ತಿಜೀವನದ ಉತ್ತಮ ಸಮಯದಲ್ಲಿ ದೇಶಕ್ಕಾಗಿ ತುಂಬಾ ಆಡಿರುವ ಕಾರಣ ಶಾಂತಿಯಿಂದ ನಿವೃತ್ತಿ ಘೋಷಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.