ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ಬೆಂಗಳೂರು: ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಎರಡು ದಿನಗಳಾಯಿತು. ಈ ದುರಂತದಲ್ಲಿ 8 ಜನ ಸಾವಿಗೀಡಾಗಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬದವರ ನೋವಿಗೆ ಪ್ರಧಾನಿ ಮೋದಿ ಅವರು ಕೂಡ ಮರುಗಿದ್ದಾರೆ. ಅಲ್ಲದೇ ಅವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು,
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.