ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆ
ಬೆಂಗಳೂರು: ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರು ರೆಗ್ಯುಲರ್ ಬೇಲ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ದರ್ಶನ್‌ಗೆ ಮತ್ತೆ ಸಂಕಷ್ಟ ಶುರುವಾಗಿದೆ. ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರದಿಂದ SLP ಅರ್ಜಿ ಸಲ್ಲಿಕೆಯಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸರ್ಕಾರದ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ದರ್ಶನ್ ಅವರ ಮಧ್ಯಂತರ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿ ಇದೇ ಶುಕ್ರವಾರ ಅಥವಾ ಮುಂದಿನ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ದರ್ಶನ್ ಪರ ವಕೀಲರು ರೆಗ್ಯುಲರ್ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದು, ಸರ್ಕಾರದ ಪರ ವಕೀಲರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ದರ್ಶನ್ಗೆ ಬಳ್ಳಾರಿ ಜೈಲಿನಲ್ಲಿ ಇದ್ದಾಗ ಬೆನ್ನು ನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರಿಂದ ಮಧ್ಯಂತರ ಜಾಮೀನು ನೀಡಲಾಗಿತ್ತು. ಆದರೆ ಈವರೆಗೂ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಲ್ಲ. ಬಿಪಿ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆಯನ್ನು ಸದ್ಯಕ್ಕೆ ಮಾಡಿಲ್ಲ ಎಂಬ ಮಾಹಿತಿ ಇದೆ. ದರ್ಶನ್ ಅವರಿಗೆ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.