ಮುಡಾ ಪ್ರಕರಣ: ಸಿಎಂ ಮೇಲ್ಮನವಿ ವಿಚಾರಣೆ ಜ.25ಕ್ಕೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ಪ್ರಕರಣ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಜನವರಿ 25 ಕ್ಕೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ತನಿಖಾ ವರದಿಯನ್ನು ಲೋಕಾಯುಕ್ತ ಪೊಲೀಸರ ಜತೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿಎಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಕೂಡ ಗುರುವಾರ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಮೇಲ್ಮನವಿಗಳ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಪಡಿಸಿದ ಹೈಕೋರ್ಟ್ ವಿಭಾಗೀಯ ಪೀಠ ಮೂಡಿತು.
ಇದರೊಂದಿಗೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಪ್ರಶ್ನಿಸಿ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ಪೀಠವು ಮೂರು ಮೇಲ್ಮನವಿಗಳಲ್ಲಿನ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.