ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಸರ್ಕಾರಿ ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ.
ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ಇನ್ನೂ ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರ್ಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ! ಇದೇನಾ ಮಹಿಳೆಯರ ಸಬಲೀಕರಣ ಎಂದು ಅವರು ಪ್ರಶ್ನಿಸಿದ್ದಾರೆ.