ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ: 7 ವರ್ಷ ಜೈಲು ಶಿಕ್ಷೆ ಪ್ರಕಟ
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇನ್ನು, ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮವಾಗಿದೆ ಎಂಬ ಆರೋಪವಿದೆ. ಅಂದಿನ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವ ವೇಳೆ ಇತರೆ ಎಲ್ಲಾ ಗುತ್ತಿಗೆದಾರರನ್ನು ಬಿಟ್ಟು ಒಎಂಸಿ ಕಂಪನಿಗೆ ಗುತ್ತಿಗೆ ಕೊಡಿಸಿತ್ತು ಎಂಬ ಆರೋಪವೂ ಇತ್ತು.
ಸಿಬಿಐ 2009 ರಲ್ಲಿ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ಈ ಅಕ್ರಮದಿಂದ ಆಂಧ್ರ ಪ್ರದೇಶ ಸರ್ಕಾರಕ್ಕೆ 884 ಕೋಟಿ ರೂ. ನಷ್ಟ ಎಂದು ಸಿಬಿಐ ತನಿಖೆ ಮಾಡಿ ಬೆಳಕಿಗೆ ತಂದಿತ್ತು.