ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಮೈಸೂರು: ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು.
ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ ಎಂದು ಸಚಿವರು ಹೇಳಿದರು.
ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯ ಆಗುವುದಿಲ್ಲ. ತಮಿಳುನಾಡು ಸರ್ಕಾರವನ್ನೇ ಒಪ್ಪಿಸದೆ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ.
ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದರಲ್ಲ, ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ? ಎಂದು ಅವರು ಕಿಡಿಕಾರಿದರು.