ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಎನ್.ರವಿಕುಮಾರ್’ಗೆ ರಿಲೀಫ್
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಗೆ ರಿಲೀಫ್ ಸಿಕ್ಕಿದೆ. ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.
ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಬಳಿಕ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ‘ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ’ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.
ಇಂದಿನ ವಿಚಾರಣೆಯಲ್ಲಿ ಎಂಎಲ್ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಾಡಿದ್ದು, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ. ರಾಜಕೀಯ ಪಕ್ಷದ ಮೂಲಕ ಎಫ್ಐಆರ್ ದಾಖಲಾಗದಿದ್ದಾಗ ಸಾಮಾಜಿಕ ಕಾರ್ಯಕರ್ತರ ಮೂಲಕ ಅವರು ಎಫ್ಐಆರ್ ದಾಖಲಿಸಲು ಮುಂದಾದರು. ಹೀಗಾಗಿ ಪ್ರಸ್ತುತ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ವಾದಿಸಿದರು. ಅದರಂತೆ, ನ್ಯಾಯಾಲಯವು ಪ್ರಕರಣದಲ್ಲಿ ಎಫ್ಐಆರ್ ಮತ್ತು ಹೆಚ್ಚಿನ ತನಿಖೆಗೆ ತಡೆ ನೀಡಿದೆ.