ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ!
ಚಿಕ್ಕಬಳ್ಳಾಪುರ: ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದಿದೆ. ಜಿಲ್ಲಾ ಪಂಚಾಯತ್ ಗುತ್ತಿಗೆ ಆಧಾರಿತ ಕಾರು ಚಾಲಕ ಎನ್. ಬಾಬು, ಆತ್ಮಹತ್ಯೆಗೆ ಶರಣಾಗಿದ್ದು, ಅವರು ಮುಖ್ಯ ಲೆಕ್ಕಾಧಿಕಾರಿಯ ವಾಹನದ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೇಣಿಗೆ ಶರಣಾಗಿರುವ ಚಾಲಕ ಬಾಬು ಸರ್ಕಾರಿ ಕೆಲಸ ಕೊಡಿಸುವ ಭರವಸೆಯೊಂದಿಗೆ 25 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ಡೆತ್ನೋಟ್ನಲ್ಲಿ ಬಾಬು, ನನಗೆ ವಂಚನೆಯಾಗಿದೆ, ಲಕ್ಷ ಲಕ್ಷ ಕಳೆದುಕೊಂಡಿದ್ದೇನೆ. ಈ ಕಾರಣಕ್ಕಾಗಿ ತನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಸಂಸದರ ಹೆಸರು ಮತ್ತು ಅವರ ಬೆಂಬಲಿಗರ ಹೆಸರುಗಳನ್ನು ಉಲ್ಲೇಖಿಸಿ ನನಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಈ ಘಟನೆಯ ಬಗ್ಗೆ ತಿಳಿದುಕೊಂಡ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ಇಳಿಸಿ, ತನಿಖೆಯನ್ನು ಆರಂಭಿಸಿದ್ದಾರೆ.