ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 27ರವರೆಗೆ ಮಳೆ ಮುಂದುವರಿಯಲಿದ್ದು, ಕೆಲವು ಕಡೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.
ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವಿಶೇಷವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ರೈತರು, ನಿವಾಸಿಗಳು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.