ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ
ನವದೆಹಲಿ:ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ ಎಂದು ಅವರು ಒತ್ತಿ ಹೇಳಿದ್ದಾರೆ.