ಚಿಕ್ಕಬಳ್ಳಾಪುರ: ಯುವತಿಯ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಬಂಧನ
ಚಿಕ್ಕಬಳ್ಳಾಪುರ: ಉದ್ಯೋಗಕ್ಕಾಗಿ ನಗರಕ್ಕೆ ಬಂದಿದ್ದ ಯುವತಿಯೊಬ್ಬಳನ್ನು ಡ್ರಾಪ್ ಕೊಡುವ ನೆಪದಲ್ಲಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಇಬ್ಬರು ಯುವಕರು ಗ್ಯಾಂಗ್ ರೇಪ್ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕಂದರ್ ಬಾಬಾ ಮತ್ತು ಜನಾರ್ಧನಾಚಾರಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಸದ್ಯಕ್ಕೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೀಡಿತೆ ತಮ್ಮ ಊರಿಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಸಿಕಂದರ್ ಬಾಬಾ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್‌ಗೆ ಹತ್ತಿಸಿದ್ದ. ಬಳಿಕ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ ನಂತರ ತನ್ನ ಸ್ನೇಹಿತನನ್ನು ಕರೆಸಿ ಎರಡನೇ ಬಾರಿ ಅತ್ಯಾಚಾರಕ್ಕೆ ಮುಂದಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟೇ ಅಲ್ಲದೆ, ಯುವತಿಯ ಕಿವಿಯಲ್ಲಿದ್ದ ಬಂಗಾರದ ಓಲೆ ಕಸಿದು ಮಾರಾಟ ಮಾಡಿಕೊಂಡಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ನಂತರ ಯುವತಿಯನ್ನು ಸಮೀಪದ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗಲಾಗಿತ್ತು. ಸ್ಥಳೀಯರ ಸಹಾಯದಿಂದ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ಯ, ಪೀಡಿತೆಯ ಆರೋಗ್ಯ ಸ್ಥಿತಿಗೆ ತಕ್ಕಂತೆ ಚಿಕಿತ್ಸೆ ನೀಡಲಾಗುತ್ತಿದೆ.