ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಂದಿನ ದಿನಗಳಲ್ಲಿ ಐಟಿ- ಬಿಟಿ ಕಂಪನಿಗಳ ಜೊತೆ ನಾನು ಹಾಗೂ ಐಟಿ, ಕೈಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರುಗಳು ಪ್ರತ್ಯೇಕವಾಗಿ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಟೀಕೆ ಟಿಪ್ಪಣಿ ಮಾಡುವವರಿಗೆ ನಮ್ಮ ಕೆಲಸವೇ ಉತ್ತರ ನೀಡುತ್ತದೆ.
ನಾವು ನಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾವು ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಭಗವಂತ ಹಾಗೂ ಜನರು ನಮಗೆ ಆಶೀರ್ವಾದ ಮಾಡಿದ್ದು, ನಾವು ಅವರ ಸೇವೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕೆ.ಆರ್ ಪುರಂ ಭಾಗದಲ್ಲಿ ರಸ್ತೆ ಒತ್ತುವರಿ ಪ್ರಕರಣಗಳು ಹೆಚ್ಚಿವೆ. ಒಬ್ಬೊಬ್ಬರು ಐದಾರು ನಿವೇಶಗಳಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಅಕ್ರಮವಾಗಿ ಕಟ್ಟುವ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೆಲಸಮ ಮಾಡಲಾಗುವುದು. 30×40 ಅಳತೆಯ ಕಟ್ಟಡಗಳಿಗೆ ಓಸಿ ಸಿಸಿ ವಿನಾಯಿತಿ ನೀಡಲಾಗಿದೆ. ಇದು ತಾತ್ಕಾಲಿಕ ವಿನಾಯಿತಿ. ಹೀಗಾಗಿ ಮುಂದೆ ಎಲ್ಲರೂ ಕಟ್ಟಡ ನಕ್ಷೆ ಅನುಮೋದನೆ ಪಡೆದುಕೊಳ್ಳಿ. ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಹಡಿಗಳನ್ನು ನಿರ್ಮಾಣ ಮಾಡುವುದು, ಸೆಟ್ ಬ್ಯಾಕ್ ಬಿಡದೆ ಒತ್ತೊತ್ತಾಗಿ ಮನೆ ಕಟ್ಟುವುದಕ್ಕೆ ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು.