ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?
ಬೆಂಗಳೂರು: ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಗಣನೀಯವಾಗಿ ಕಡಿಮೆಯಾಗಿದ್ದು, ರಾಜ್ಯದಾದ್ಯಂತ ಒಣ ಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳೆಲ್ಲೆಡೆ ಇಂದು ಮಳೆಯ ಚಿಹ್ನೆಯೇ ಕಾಣದಿರುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದ್ದರೂ, ಮಳೆಯ ನಿರೀಕ್ಷೆ ಕಡಿಮೆ. ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಾಣಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣ ಹವೆಯ ವಾತಾವರಣ ಇದೆ. ಈ ಪ್ರದೇಶಗಳಲ್ಲಿ ಮಳೆಯ ಸಣ್ಣ ಸುಳಿವು ಕೂಡ ಕಾಣುವ ಸಾಧ್ಯತೆಯಿಲ್ಲ.
ಹವಾಮಾನ ತಜ್ಞರ ಪ್ರಕಾರ, ಈ ಒಣಹವೆಯು ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಮುಂಚಿತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ಹೇಳಿದೆ.






