ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್
ಕನಕಪುರ: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ.
ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು” ಎಂದು ತಿಳಿಸಿದರು.






