ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಅಕ್ರಮವಾಗಿ ಒತ್ತುವರಿ ಮಾಡಿದವರಿಗೆ ಯಾವುದೇ ರೀತಿಯ ಸೌಲಭ್ಯ ಅಥವಾ ಗಿಫ್ಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಒತ್ತುವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಓಲೈಕೆ ರಾಜಕಾರಣ ಮಾಡುವುದಿಲ್ಲ ಎಂದುಹೇಳಿದರು.
ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವುದೇ ರೀತಿಯ ಓಲೈಕೆ ರಾಜಕಾರಣದ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.
ಪ್ರತಿಪಕ್ಷಗಳು ಮುಸ್ಲಿಂಮರ ಓಲೈಕೆ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, “ನಾವು ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ” ಎಂದು ಹೇಳಿದರು.
ಮಾನವೀಯತೆ ದೃಷ್ಟಿಯಿಂದ ಅರ್ಹತೆ ಇರುವವರಿಗೆ ಮಾತ್ರ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ ಅವರು, “ಈ ಹಿಂದೆ ಕೆಲ ಭಾಗಗಳಲ್ಲಿ ಹಕ್ಕುಪತ್ರ ನೀಡಲಾಗಿದೆ ಎಂಬ ಮಾಹಿತಿ ಇದೆ. ಅದನ್ನು ಪರಿಶೀಲನೆ ನಡೆಸಲು ಸೂಚಿಸಿದ್ದೇನೆ” ಎಂದರು.






