ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು – ಬಿ.ಎಸ್. ಯಡಿಯೂರಪ್ಪ ಒತ್ತಾಯ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಇಡೀ ರಾಜ್ಯದ ಮಹಿಳೆಯರಲ್ಲಿ ಭಯ ಮತ್ತು ಆತಂಕ ಉಂಟುಮಾಡಿದೆ. ಇಂತಹ ದುರ್ಘಟನೆಗಳ ಬಳಿಕ ಮುಂದೇನು ಎಂಬ ಚಿಂತೆ ಮಹಿಳೆಯರಲ್ಲಿ ಹೆಚ್ಚಾಗಿದೆ. ಈಗಲಾದರೂ ಸರ್ಕಾರ ಸಂಬಂಧಪಟ್ಟವರ ವಿರುದ್ಧ ಕಾನೂನಿನಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆ ಅತ್ಯಂತ ಖಂಡನೀಯ ಎಂದು ಹೇಳಿದರು. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಬೇಕು ಮತ್ತು ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ಮಹಿಳೆಯರ ಭದ್ರತೆ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಿಕೊಳ್ಳಲಾಗದು ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.






