ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ
ದೇವನಹಳ್ಳಿ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಜನವರಿ 19ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕೊರಿಯಾದಿಂದ ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಮಹಿಳೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ವಿಮಾನ ನಿಲ್ದಾಣದ ಅಧಿಕಾರಿ ಎಫ್.ಡಿ. ಅಫ್ವಾನ್ ಅಹ್ಮದ್ ಬ್ಯಾಗೇಜ್ ಪರಿಶೀಲನೆ ಮಾಡುವ ನೆಪದಲ್ಲಿ ಮಹಿಳೆಯನ್ನು ಪುರುಷರ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಮಾನ ನಿಲ್ದಾಣದಂತಹ ಅತ್ಯಂತ ಭದ್ರತಾ ವ್ಯವಸ್ಥೆ ಇರುವ ಪ್ರದೇಶದಲ್ಲಿ ಈ ರೀತಿಯ ಘಟನೆ ಸಂಭವಿಸಿರುವುದು ಭದ್ರತಾ ಲೋಪ ಹಾಗೂ ಅಧಿಕಾರಿಗಳ ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.






