ನರೇಗಾ ಪುನರ್ ಸ್ಥಾಪನೆ ಆಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತಿದ್ದು, ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ ನರೇಗಾ ಪುನರ್ ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್’ ಅಂಗವಾಗಿ ನಡೆದ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚೆಗೆ ಬಿಜೆಪಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್ಇಜಿಎ)ಯನ್ನು ದುರುದ್ದೇಶದಿಂದ ರದ್ದುಪಡಿಸಿ, ಅದರ ಬದಲಾಗಿ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಎಂಬ ಹೆಸರಿನ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.
2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಅದೇ ಅವಧಿಯಲ್ಲಿ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು ಹಾಗೂ ಅರಣ್ಯ ಹಕ್ಕು ಕಾಯ್ದೆಗಳು ಕಾಂಗ್ರೆಸ್ ಸರ್ಕಾರದ ಜನಪರ ಸಾಧನೆಗಳಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಸರ್ಕಾರ ಸದಾ ಮಹಿಳೆಯರು, ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಸಣ್ಣ ರೈತರ ಪರವಾಗಿ ಚಿಂತಿಸಿದೆ. ಆದರೆ ಬಿಜೆಪಿ ಸರ್ಕಾರ ಈ ಜನಪರ ಯೋಜನೆಗಳನ್ನು ಕ್ರಮೇಣ ನಾಶ ಮಾಡುತ್ತಿದೆ ಎಂದು ಆರೋಪಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಕಡಿಮೆ ಮಾಡಲಾಗುತ್ತಿದೆ. ನರೇಗಾ ಯೋಜನೆಯಡಿ ಶೇ.53 ಮಹಿಳೆಯರು, ಶೇ.28 ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದರು. ಈ ಯೋಜನೆಯಿಂದ ಗ್ರಾಮೀಣ ಬಡವರಿಗೆ ವರ್ಷಪೂರ್ತಿ ಉದ್ಯೋಗ ಸಿಗುವಂತಾಗಿತ್ತು ಎಂದು ಹೇಳಿದರು.






