No menu items!
7.3 C
Munich
Wednesday, April 22, 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

Must read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ಬೆಂಗಳೂರು: ಭ್ರಷ್ಟಾಚಾರ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಬೆಳಗ್ಗೆ ಸುಮಾರು 6 ಗಂಟೆಯಿಂದಲೇ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು ಕಾರ್ಯಾಚರಣೆ ಆರಂಭಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಒಂದೇ ಸಮಯದಲ್ಲಿ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಹೆಬ್ಬಾಳದ ವೆಟರ್ನರಿ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಇದೇ ವೇಳೆ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಅವರ ನಿವಾಸದಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್ ಅವರ ಮನೆ ಮೇಲೆ ದಾಳಿ ನಡೆದಿದೆ. ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಬಾಗಿಲು ತೆರೆಯದ ಕಾರಣ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳು ಮನೆ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಯಿತು. ಬಳಿಕ ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್‌ಚಾರ್ಜ್) ಆಶಿಫ್ ಇಕ್ಬಾಲ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗಳ ಬಳಿಕ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- Advertisement -spot_img

More articles

- Advertisement -spot_img

Latest article