ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
ಬೆಂಗಳೂರು: ದೇಶಾದ್ಯಂತ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಆಡಳಿತವಲ್ಲ, ಸಂಘಟಿತ ಲೂಟಿ ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಚುನಾವಣೆಗಳು ಮುಗಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೆ ಬೆಲೆ ಏರಿಕೆ ಮಾಡಿದೆ ಎಂದು ಟೀಕಿಸಿದ್ದಾರೆ.
ಚುನಾವಣೆ ಅವಧಿಯಲ್ಲಿ ಉದ್ದೇಶಪೂರ್ವಕವಾಗಿ ದರ ಏರಿಕೆಯನ್ನು ತಡೆಹಿಡಿದಿದ್ದ ಸರ್ಕಾರ, ಮೇ 1ರಂದು ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು ಹೆಚ್ಚಿಸಿದೆ. ಇದರ ಪರಿಣಾಮವಾಗಿ ಒಂದು ಸಿಲಿಂಡರ್ ಬೆಲೆ 3,071.50 ರೂಪಾಯಿಗೆ ತಲುಪಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು ಆರು ಬಾರಿ ಹೆಚ್ಚಿಸಲಾಗಿದ್ದು, ಇದರಿಂದ ಸಾಮಾನ್ಯ ಜನರು ಹಾಗೂ ವ್ಯಾಪಾರ ವಲಯದ ಮೇಲೆ 1,518 ರೂಪಾಯಿವರೆಗೆ ಹೆಚ್ಚುವರಿ ಹೊರೆ ಬಿದ್ದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಆರ್ಥಿಕ ಸವಾಲುಗಳು ಎದುರಾದಾಗ ಜನರನ್ನು ರಕ್ಷಿಸುವ ಬದಲು, ಕೇಂದ್ರ ಸರ್ಕಾರವೇ ಜನರ ಮೇಲೆ ಹೊರೆ ಹಾಕುತ್ತಿದೆ ಎಂದು ಅವರು ಟೀಕಿಸಿದರು.
ವಿದೇಶಾಂಗ ನೀತಿಯ ವೈಫಲ್ಯದಿಂದ ದೇಶದ ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿದ್ದು, ಅದರ ಹೊರೆ ಈಗ ಸಾಮಾನ್ಯ ಜನರು ಹೊರುವಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.



