ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆಯೇ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಸಂಭವವಿದ್ದು, ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರಾದ ಮಳೆಯಾಗುವ ಸಾಧ್ಯತೆ ಇದೆ.ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇವುಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, ಉಳಿದ ಭಾಗಗಳಲ್ಲಿ ಎಚ್ಚರಿಕೆ ಮುಂದುವರಿಯಲಿದೆ.ಇದರ ನಡುವೆ, ಮೈಸೂರು ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿಯ ತೀವ್ರತೆ ಹೆಚ್ಚಾಗಿದೆ. ಹುಣಸೂರು ತಾಲ್ಲೂಕಿನ ಬಿಳಿಕೆರೆ ಮತ್ತು ಮನುಗನಹಳ್ಳಿ ಮಧ್ಯೆ ಭಾರೀ ಗಾಳಿಗೆ ಬೃಹತ್ ಮರವೊಂದು ಧರೆಗುರುಳಿದ್ದು, ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಪರಿಣಾಮವಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.



