ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಕರಾವಳಿಯಲ್ಲಿ ಮತ್ತೆ ಹೀಟ್ ವೇವ್ ಆತಂಕ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ, ಇತ್ತೀಚೆಗೆ ತಂಪಾಗಿದ್ದ ಕರಾವಳಿ ಭಾಗದಲ್ಲಿ ಮತ್ತೆ ಹೀಟ್ವೇವ್ ಆತಂಕ ಎದುರಾಗಿರುವುದಾಗಿ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮುಂದಿನ ಮೂರುರಿಂದ ನಾಲ್ಕು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದೆ.



