ದೇವನಹಳ್ಳಿ ಬಳಿ ಭೀಕರ ಅಪಘಾತ! ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿ ಸಮೀಪದ ರಾಣಿ ಕ್ರಾಸ್ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಈ ದುರ್ಘಟನೆ ನಡೆದಿದೆ.
ದೇವನಹಳ್ಳಿಯಿಂದ ದಾಬಸ್ಪೇಟೆಗೆ ಸಂಪರ್ಕ ಕಲ್ಪಿಸುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR)ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿಗೆ ಹಿಂದಿನಿಂದ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜು!
ಅಪಘಾತದ ತೀವ್ರತೆಗೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನ ಪಕ್ಕದ ಆಸನದಲ್ಲಿ ಕುಳಿತಿದ್ದ ಶಿವಕುಮಾರ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಪವನ್, ಪ್ರದೀಪ್, ಚಂದನ್ ಹಾಗೂ ವಿನೋದ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮದಕರಿ ನಾಯಕ ಕಾರ್ಯಕ್ರಮಕ್ಕೆ ತೆರಳಿದ್ದ ಸ್ನೇಹಿತರು!
ಅಪಘಾತಕ್ಕೀಡಾದ ಕಾರಿನಲ್ಲಿದ್ದ ಸ್ನೇಹಿತರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದ ವೀರ ಮದಕರಿ ನಾಯಕ ಕಾರ್ಯಕ್ರಮಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಬಳಿಕ ಲಾರಿ ಚಾಲಕ ಪರಾರಿ!
ಅಪಘಾತಕ್ಕೀಡಾದ ರೇಂಜ್ ರೋವರ್ ಕಾರಿನ ನೋಂದಣಿ ಸಂಖ್ಯೆ KA-51-MX-8828 ಆಗಿದ್ದು, ಗ್ಯಾಸ್ ಲಾರಿಯ ನೋಂದಣಿ ಸಂಖ್ಯೆ AP-39-WC-8828 ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ದೇವನಹಳ್ಳಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ನಿಖರ ಕಾರಣ ಹಾಗೂ ಲಾರಿ ಚಾಲಕನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.



