ಬೆಂಗಳೂರಿನ ಕೊನ್ರಾಡ್ ಹೋಟೆಲ್ ನಲ್ಲಿ ದುರಂತ: ವಿದ್ಯುತ್ ಶಾಕ್ ಗೆ ಇಬ್ಬರು ವಿದೇಶಿಗರು ಸಾವು, ಮತ್ತಿಬ್ಬರಿಗೆ ಗಾಯ!

Must read

ಬೆಂಗಳೂರಿನ ಕೊನ್ರಾಡ್ ಹೋಟೆಲ್ ನಲ್ಲಿ ದುರಂತ: ವಿದ್ಯುತ್ ಶಾಕ್ ಗೆ ಇಬ್ಬರು ವಿದೇಶಿಗರು ಸಾವು, ಮತ್ತಿಬ್ಬರಿಗೆ ಗಾಯ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕೊನ್ರಾಡ್ ಹೋಟೆಲ್ನ ಸ್ವಿಮ್ಮಿಂಗ್ ಪೂಲ್ ಬಳಿ ವಿದ್ಯುತ್ ಸ್ಪರ್ಶದಿಂದ ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈ ಅವಘಡದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೋಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತರನ್ನು ಸ್ಲೋವೇಕಿಯಾ ಪ್ರಜೆ ಓರಿಯಾಟ್ (45) ಹಾಗೂ ನೆದರ್ಲ್ಯಾಂಡ್ಸ್ ಪ್ರಜೆ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ. ಅಕ್ಟೋಬರ್ 30ರ ರಾತ್ರಿ ಸುಮಾರು 11.30ರ ವೇಳೆಗೆ ಹೋಟೆಲ್ನ ಮೂರನೇ ಮಹಡಿಯಲ್ಲಿರುವ ಸ್ವಿಮ್ಮಿಂಗ್ ಪೂಲ್ ಬಳಿ ಈ ಘಟನೆ ಸಂಭವಿಸಿದೆ. ಮೃತ ವಿದೇಶಿಗರು ಕಳೆದ ಕೆಲವು ದಿನಗಳಿಂದ ಹೋಟೆಲ್ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.
ರಾತ್ರಿ ಸ್ವಿಮ್ಮಿಂಗ್ ಮುಗಿಸಿ ಹೊರಬರುತ್ತಿದ್ದ ವೇಳೆ ಇಬ್ಬರೂ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ವಿದ್ಯುತ್ ಸೋರಿಕೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆಯ ವೇಳೆ ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದ ಇಬ್ಬರನ್ನು ರಕ್ಷಿಸಲು ಅಮೆರಿಕ ಮೂಲದ ವ್ಯಕ್ತಿ ಹಾಗೂ ಹೋಟೆಲ್ನ ಅಟೆಂಡರ್ ಮುಂದಾಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಸ್ಪರ್ಶವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇನ್ನು ಹೋಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಇಬ್ಬರು ವಿದೇಶಿಗರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮೃತ ಅಲೆಕ್ಸಾಂಡರ್ ಅವರ ಪತ್ನಿ ಕೊನ್ರಾಡ್ ಹೋಟೆಲ್ ಆಡಳಿತ ಮಂಡಳಿ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಲಸೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಹೋಟೆಲ್ನ ಸ್ವಿಮ್ಮಿಂಗ್ ಪೂಲ್ ಬಳಿ ವಿದ್ಯುತ್ ಸೋರಿಕೆ ಹೇಗೆ ಸಂಭವಿಸಿತು? ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗಿತ್ತೇ? ಘಟನೆಯಲ್ಲಿ ಹೋಟೆಲ್ ಸಿಬ್ಬಂದಿಯ ನಿರ್ಲಕ್ಷ್ಯವಿದೆಯೇ ಎಂಬ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article