ಬೆಂಗಳೂರಿಗೆ ಹೊರಟಿದ್ದ ಬಸ್ ಪಲ್ಟಿ: ಚಳ್ಳಕೆರೆ ಬಳಿ 44 ಪ್ರಯಾಣಿಕರು ಅದೃಷ್ಟವಶಾತ್ ಪಾರು
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 44 ಪ್ರಯಾಣಿಕರು ಯಾವುದೇ ಪ್ರಾಣಹಾನಿಯಿಲ್ಲದೆ ಪಾರಾಗಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆಗ್ಗೆರೆ ಗ್ರಾಮದ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಸ್ಸಿನಲ್ಲಿ ಒಟ್ಟು 44 ಪ್ರಯಾಣಿಕರಿದ್ದರು. ಪಲ್ಟಿಯ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಗಾಯ ಅಥವಾ ಸಾವು ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡು ಮನೆಗಳಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕೆಲಕಾಲ ಸಂಚಾರ ಅಡಚಣೆ ಉಂಟಾಯಿತು. ಮಾಹಿತಿ ತಿಳಿದ ತಕ್ಷಣ ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರೇನ್ ಸಹಾಯದಿಂದ ಬಸ್ಸನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಬಸ್ ವೇಗವಾಗಿ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



