ಪರೀಕ್ಷಾ ಅಕ್ರಮಗಳಿಗೆ ಇನ್ನು ಕಠಿಣ ಶಿಕ್ಷೆ: Amendment Bill-2026 ಮಹತ್ವದ ಹೆಜ್ಜೆ ಎಂದ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ-2026’ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆಯು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟು ಒದಗಿಸಲಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಸಂಘಟಿತ ಪರೀಕ್ಷಾ ವಂಚನೆ ಹಾಗೂ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲು ಈ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಕೂಡ ಮಹತ್ವದ ಕ್ರಮವಾಗಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹೊಸ ತಿದ್ದುಪಡಿ ಮಸೂದೆಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.



