ಕಾವೇರಿ ನೀರಿನ ಹೋರಾಟಕ್ಕೆ ರಾಜ್ಯದ ಒಗ್ಗಟ್ಟು: ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಡಿ.ಕೆ. ಶಿವಕುಮಾರ್
ನವದೆಹಲಿ: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ರಾಜ್ಯದ ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ಕುರಿತು ಚರ್ಚಿಸಲು ಬರುವ ಆಗಸ್ಟ್ 2ರಂದು (ಭಾನುವಾರ) ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಭೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು ಹಾಗೂ ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಕರ್ನಾಟಕ ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದು, ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಸರ್ವಪಕ್ಷ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯದ ಹಿತಾಸಕ್ತಿಗಾಗಿ ಎಲ್ಲರೂ ತಮ್ಮ ಮಟ್ಟಿಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ಕೇಂದ್ರ ಸರ್ಕಾರವನ್ನು ಭೇಟಿ ಮಾಡಬೇಕು ಎಂದು ಡಿಎಂಕೆ ನಾಯಕ ಡಾ. ಅನ್ಬುಮಣಿ ರಾಮದಾಸ್ ನೀಡಿರುವ ಸಲಹೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, “ಈ ವಿಚಾರದಲ್ಲಿ ನಾವು ಪರಸ್ಪರ ಕಿತ್ತಾಟ ಬಯಸುವುದಿಲ್ಲ. ದೇಶದ ಕಾನೂನು ಹಾಗೂ ವ್ಯವಸ್ಥೆಯನ್ನು ಗೌರವಿಸಬೇಕು. ರಾಜ್ಯಗಳ ನಡುವೆ ಪರಸ್ಪರ ಗೌರವ ಇರಬೇಕು. ಇಡೀ ದೇಶ ಒಗ್ಗಟ್ಟಿನಿಂದ ಕೆಲಸ ಮಾಡಬೇಕು” ಎಂದು ಹೇಳಿದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಡಿಯೂರಪ್ಪ ಅವರು ಕೂಡ ಕೆಲ ಕಾಲ ಸಚಿವ ಸಂಪುಟ ರಚನೆ ಮಾಡದೇ ಆಡಳಿತ ನಡೆಸಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರ ಅನುಭವಿಸಲಿಲ್ಲವೇ?” ಎಂದು ಬಿಜೆಪಿ ನಾಯಕರ ವಿರುದ್ಧ ಮರುಪ್ರಶ್ನೆ ಹಾಕಿದರು.



