ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ 1 ಲಕ್ಷ ರೂಗಳ ಸಾಲ ಮನ್ನಾ ಹಾಗೂ ಸಹಕಾರಿ ಸಂಘಗಳಲ್ಲಿನ ಸಾಲ ಮನ್ನಾವನ್ನು 50 ಸಾವಿರ ರೂ ನಿಂದ 1ಲಕ್ಷ ರೂಗೆ ವಿಸ್ತರಿಸುವುದಾಗಿ ಘೋಷಿಸಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತಾಡಿದ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಸಹಕಾರಿ ಸಂಘದಲ್ಲಿನ ರೈತರ 50 ಸಾವಿರ ರೂ.ಗಳವರೆಗಿನ ಸಾಲಮನ್ನಾ ಮಾಡಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಮನ್ನಾ ಮಾಡುವಂತೆ ಹೋದಲ್ಲೆಲ್ಲಾ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕ ಆಗ್ರಹಿಸಿ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ನಾವು ಅಧಿಕಾರಕ್ಕೆ ಬಂದ ಕೂಡಲೇ ಕೇಂದ್ರದ ಕಡೆ ನೋಡದೇ ರಾಷ್ಟ್ರೀಕೃತ ಬ್ಯಾಂಕ್ ಗಳ 1 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಿ ಆದೇಶ ಹೊರಡುಸುತ್ತೇನೆ. ಜೊತೆಗೆ ಸಹಕಾರಿ ಸಂಘದ ಸಾಲ ಮನ್ನಾವನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಳ ಮಾಡುತ್ತೇನೆ. ಜೊತೆಗೆ ಮೂರು ತಿಂಗಳ ಒಳಗೆ ನೇಕಾರರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದರು.
ಕರ್ನಾಟಕದ ಯುವ ಜನತೆ ಭವಿಷ್ಯ, ಸರ್ವರಿಗೂ ಸಮಪಾಲು ಸಮಬಾಳು ಸಾಮಾಜಿಕ ನ್ಯಾಯ, ಮಕ್ಕಳ ಶಿಕ್ಷಣಕ್ಕೆ ಕಾಯಕಲ್ಪ, ಆರೋಗ್ಯ ಕರ್ನಾಟಕ, ಮೂಲಸೌಕರ್ಯ ವಿಸ್ತರಣೆ, ಆರ್ಥಿಕ ಔದ್ಯೋಗಿಕ ವಿಸ್ತರಣೆ, ನವ ಭಾರತಕ್ಕಾಗಿ ನವ ಬೆಂಗಳೂರು ಸೇರಿದಂತೆ ಹತ್ತು ಹಲವು ಅಂಶ ಒಳಗೊಂಡ ಪ್ರಣಾಳಿಕೆ ಇದಾಗಿದೆ ಸರ್ಕಾರದ ಬದಲಿಸಿ ಬಿಜೆಪಿ ಗೆಲ್ಲಿಸಿ ಉದ್ದೇಶದೊಂದಿಗೆ ಪ್ರಣಾಳಿಕೆ ರಚಿಸಲಾಗಿದೆ ಎಂದರು.