No menu items!
10.7 C
Munich
Tuesday, July 21, 2026

ಗಣಿ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸಿಎಂ ಡಿಕೆಶಿ: ಬರೋಬ್ಬರಿ 160 ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ

Must read

ಗಣಿ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ ಸಿಎಂ ಡಿಕೆಶಿ: ಬರೋಬ್ಬರಿ 160 ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವುದು ಹಾಗೂ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು ಸೇರಿದಂತೆ ಒಟ್ಟು 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉಪ ಮುಖ್ಯಮಂತ್ರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಯಲ್ಲಿ ಒಂದೇ ಸ್ಥಳದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಸುಮಾರು ಶೇ.80ರಷ್ಟು ಸಿಬ್ಬಂದಿಗೆ ವರ್ಗಾವಣೆ ಆದೇಶ ನೀಡಲಾಗಿದೆ. ದಶಕಗಳ ಕಾಲ ಸ್ವಂತ ಜಿಲ್ಲೆ ಅಥವಾ ನೆರೆಯ ಜಿಲ್ಲೆಗಳಲ್ಲೇ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳಿಗೂ ಈ ಬಾರಿ ವರ್ಗಾವಣೆ ಅನ್ವಯವಾಗಿದೆ.
ಆದೇಶದಲ್ಲಿ ಏನಿದೆ?
ಸರ್ಕಾರದ ಆದೇಶದ ಪ್ರಕಾರ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಲವು ಉಪನಿರ್ದೇಶಕರು ಹಾಗೂ ಅಧಿಕಾರಿಗಳು ತಮ್ಮ ಸ್ವಂತ ಜಿಲ್ಲೆ ಅಥವಾ ನೆರೆಯ ಜಿಲ್ಲೆಗಳಲ್ಲೇ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಸಮಸ್ಯೆಗಳು, ಸಾರ್ವಜನಿಕ ದೂರುಗಳು ಹಾಗೂ ಸ್ಥಳೀಯ ಮಟ್ಟದಲ್ಲಿ ಏಕಸ್ವಾಮ್ಯ ಬೆಳೆಯುವ ಸಾಧ್ಯತೆಗಳು ಹೆಚ್ಚಾಗಿದ್ದವು.
ದೀರ್ಘಕಾಲ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುವುದರಿಂದ ಸ್ವಹಿತಾಸಕ್ತಿಗೆ ಅವಕಾಶ ದೊರೆಯುವ ಸಾಧ್ಯತೆ ಇರುವುದರಿಂದ, ಸ್ಥಳೀಯ ಪ್ರಭಾವಕ್ಕೆ ಕಡಿವಾಣ ಹಾಕುವುದು, ಅಕ್ರಮಗಳನ್ನು ತಡೆಯುವುದು ಹಾಗೂ ಇಲಾಖೆಯ ಆದಾಯ ಸಂಗ್ರಹಣಾ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಈ ವರ್ಗಾವಣೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ವರ್ಗಾವಣೆಯಾದ ಎಲ್ಲಾ ಅಧಿಕಾರಿಗಳು ಕೂಡಲೇ ಹೊಸ ಕರ್ತವ್ಯ ಸ್ಥಳಕ್ಕೆ ವರದಿ ಮಾಡಿಕೊಂಡು ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಜುಲೈ 1ರಂದು ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಇಲಾಖೆಯಲ್ಲಿನ ಆಡಳಿತಾತ್ಮಕ ಬದಲಾವಣೆಯ ಅಗತ್ಯವನ್ನು ಪ್ರಸ್ತಾಪಿಸಿದ್ದರು. ಈ ವೇಳೆ ಸಂಬಂಧಿತ ಪ್ರಸ್ತಾವನೆ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದರು.
ಸ್ಥಳೀಯ ಪ್ರಭಾವವನ್ನು ತಗ್ಗಿಸಿ, ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಇತಿಹಾಸದಲ್ಲೇ ಇದು ಅತಿದೊಡ್ಡ ವರ್ಗಾವಣೆ ಪ್ರಕ್ರಿಯೆ ಎಂದು ಹೇಳಲಾಗುತ್ತಿದ್ದು, ಅಕ್ರಮ ಗಣಿಗಾರಿಕೆ ನಿಯಂತ್ರಣ ಹಾಗೂ ಗಣಿ ಆದಾಯ ಹೆಚ್ಚಳದ ದಿಸೆಯಲ್ಲಿ ಸರ್ಕಾರದ ಮಹತ್ವದ ಹೆಜ್ಜೆಯಾಗಿ ಇದನ್ನು ಪರಿಗಣಿಸಲಾಗಿದೆ.

- Advertisement -spot_img

More articles

- Advertisement -spot_img

Latest article