No menu items!
12.1 C
Munich
Thursday, May 7, 2026

ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ, ಮೇ 26ಕ್ಕೆ ವಿಚಾರಣೆ

Must read

ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ, ಮೇ 26ಕ್ಕೆ ವಿಚಾರಣೆ

ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಸಚಿನ್ ಶಂಕರ್ ಮಗದಂ ಹಾಗೂ ರಾಜೇಶ್ ರೈ ಕೆ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲರು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ಕೋರಿದರು. ಮನವಿಯನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಇದೇ ಪ್ರಕರಣದಲ್ಲಿ 7 ವರ್ಷ ಶಿಕ್ಷೆಗೆ ಗುರಿಯಾಗಿರುವ ಪೊಲೀಸ್ ವೃತ್ತ ನಿರೀಕ್ಷಕ ಚನ್ನಕೇಶವ ಟಿಂಗರೀಕರ್ ಪರ ವಕೀಲರು, ಅವರ ವಿರುದ್ಧ ಜಾಮೀನು ನೀಡಬಹುದಾದ ಅಪರಾಧಗಳೇ ಇದ್ದು, ಜೈಲು ಶಿಕ್ಷೆ ಅನುಭವಿಸುವ ಅವಶ್ಯಕತೆ ಇಲ್ಲ ಎಂದು ವಾದಿಸಿ ಜಾಮೀನು ಕೋರಿ ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಟಿಂಗರೀಕರ್ ಅವರ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬಹುದು ಎಂದು ಸೂಚಿಸಿ, ಆ ಅರ್ಜಿಯ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ
2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್ನಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆಗೀಡಾಗಿದ್ದರು. ಬೆಳಗ್ಗೆ ಪತ್ರಿಕೆ ಓದುತ್ತಿದ್ದ ವೇಳೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು.
ಪ್ರಾರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ತನಿಖೆ ಸರಿಯಾಗಿ ನಡೆಯುತ್ತಿಲ್ಲವೆಂದು ಕುಟುಂಬಸ್ಥರು ಆರೋಪಿಸಿದ್ದರು. ಬಳಿಕ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಸಿಬಿಐ ತನಿಖೆ ವೇಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಸಾಕ್ಷಿ ನಾಶಪಡಿಸಿದ ಆರೋಪವೂ ಕೇಳಿಬಂದಿತ್ತು. 2020ರಲ್ಲಿ ಸಿಬಿಐ ಅವರನ್ನು ಬಂಧಿಸಿತ್ತು. ನಂತರ ಹಲವು ಹಂತಗಳಲ್ಲಿ ಜಾಮೀನು, ಜಾಮೀನು ರದ್ದು, ಮರುಬಂಧನದ ಬೆಳವಣಿಗೆಗಳು ನಡೆದಿದ್ದವು.
ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯ 17 ಮಂದಿಯನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದೀಗ ಆ ಆದೇಶ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -spot_img

More articles

- Advertisement -spot_img

Latest article