ಕರ್ನಾಟಕಕ್ಕೆ ಮತ್ತೆ ಶಾಕ್.! ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ಹರಿಸಲು ‘CWRC’ ಸೂಚನೆ
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ಈ ಶಿಫಾರಸಿನ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ದೆಹಲಿಯಲ್ಲಿರುವ CWMA ಕಚೇರಿಯಲ್ಲಿ ಇಂದು ಬೆಳಗ್ಗೆ ಅಧ್ಯಕ್ಷ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಮಹೇಶ್ ಅವರು ಖುದ್ದಾಗಿ ಭಾಗವಹಿಸಿದ್ದರು. ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ, ನೀರಿನ ಲಭ್ಯತೆ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ಅವರು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ.
ತಮಿಳುನಾಡಿನ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಆಗಬಹುದಾದ ಮಳೆ, ಜಲಾಶಯಗಳಲ್ಲಿರುವ ನೀರಿನ ಸಂಗ್ರಹ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿದ ಬಳಿಕ CWRC ಈ ಶಿಫಾರಸು ಮಾಡಿದೆ ಎನ್ನಲಾಗಿದೆ.
ಆಗಸ್ಟ್ 10ರವರೆಗಿನ ಮಾಹಿತಿಯ ಪ್ರಕಾರ, ತಮಿಳುನಾಡು ಗಡಿಯ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಈಗಾಗಲೇ ಸುಮಾರು 9 ಟಿಎಂಸಿ ನೀರು ಹರಿದು ಹೋಗಿರುವುದು ದಾಖಲಾಗಿದೆ. ಇದೀಗ CWRC ಶಿಫಾರಸಿನಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸಿದರೆ, ತಮಿಳುನಾಡಿಗೆ ಹರಿಯುವ ಒಟ್ಟು ನೀರಿನ ಪ್ರಮಾಣ ಸುಮಾರು 16 ಟಿಎಂಸಿಗೆ ತಲುಪಲಿದೆ.
ಇದೀಗ CWRC ಮಾಡಿರುವ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎಷ್ಟರಮಟ್ಟಿಗೆ ಅಂಗೀಕರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದೇ ವೇಳೆ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ಕರ್ನಾಟಕದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದೂ ಮಹತ್ವ ಪಡೆದುಕೊಂಡಿದೆ.



