ಡಿಕೆ ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಇಂದು ಅಸ್ತಿತ್ವಕ್ಕೆ: 14 ಮಂದಿ ಸಚಿವರಾಗಿ ಪ್ರಮಾಣವಚನ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಉಪಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದ ಗೊಂದಲಕ್ಕೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯ ಕಾಂಗ್ರೆಸ್ನ ಕೆಲ ನಾಯಕರು ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದರೂ, ಕಾಂಗ್ರೆಸ್ ವರಿಷ್ಠರು ಅದಕ್ಕೆ ಒಪ್ಪಿಗೆ ನೀಡಿಲ್ಲ. ಅಂತಿಮವಾಗಿ ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹಸಿರು ನಿಶಾನೆ ತೋರಿಸಲಾಗಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದು, ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಸತೀಶ್ ಜಾರಕಿಹೊಳಿ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಡಾ. ಯತೀಂದ್ರ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರಿಗೆ ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಲಾಗಿದೆ. ಒಕ್ಕಲಿಗ ಸಮುದಾಯದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮೂವರಿಗೆ ಸ್ಥಾನ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಮೂರು ಸಚಿವ ಸ್ಥಾನಗಳು ಲಭಿಸಿದ್ದರೆ, ದಲಿತ ಸಮುದಾಯದಿಂದ ಡಾ. ಪರಮೇಶ್ವರ್ ಸೇರಿ ಮೂವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ ಕುರುಬ ಸಮುದಾಯಕ್ಕೆ ಎರಡು ಸ್ಥಾನಗಳು ದೊರೆತಿದ್ದು, ಪರಿಶಿಷ್ಟ ಪಂಗಡ (ಎಸ್ಟಿ), ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ತಲಾ ಒಂದು ಸಚಿವ ಸ್ಥಾನ ನೀಡಲಾಗಿದೆ.
ಹೊಸ ಸರ್ಕಾರದ ಮೊದಲ ಸಂಪುಟದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಕಾಪಾಡಲು ಕಾಂಗ್ರೆಸ್ ಹೈಕಮಾಂಡ್ ವಿಶೇಷ ಗಮನ ಹರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯದ ನೂತನ ಸರ್ಕಾರದ ಕಾರ್ಯವೈಖರಿ ಹಾಗೂ ಸಚಿವರಿಗೆ ಹಂಚಿಕೆಯಾಗುವ ಖಾತೆಗಳ ಕುರಿತು ಈಗಾಗಲೇ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.



