No menu items!
13.5 C
Munich
Wednesday, June 3, 2026

ಡಿಕೆಶಿ ಸಿಎಂ ಬೆನ್ನಲ್ಲೇ ಕಾಂಗ್ರೆಸ್‌ ನಲ್ಲಿ ಹುದ್ದೆಗಳ ಹಂಚಿಕೆ ಅಂತಿಮ ಹಂತಕ್ಕೆ; ಕೆಪಿಸಿಸಿ ಸಾರಥ್ಯಕ್ಕೆ ಹರಿಪ್ರಸಾದ್ ಹೆಸರು ಮುನ್ನಡೆ

Must read

ಡಿಕೆಶಿ ಸಿಎಂ ಬೆನ್ನಲ್ಲೇ ಕಾಂಗ್ರೆಸ್‌ ನಲ್ಲಿ ಹುದ್ದೆಗಳ ಹಂಚಿಕೆ ಅಂತಿಮ ಹಂತಕ್ಕೆ; ಕೆಪಿಸಿಸಿ ಸಾರಥ್ಯಕ್ಕೆ ಹರಿಪ್ರಸಾದ್ ಹೆಸರು ಮುನ್ನಡೆ

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ತೆರವಾಗುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನುವ ಮಾಹಿತಿ ಕಾಂಗ್ರೆಸ್ ವಲಯಗಳಿಂದ ಲಭ್ಯವಾಗಿದೆ.

ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ. ಹರಿಪ್ರಸಾದ್ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದ್ದು, ಈ ಸಂಬಂಧ ಅಧಿಕೃತ ಘೋಷಣೆ ಕೂಡ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಹಿಂದುಳಿದ ವರ್ಗದ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ಸ್ಥಾನಮಾನ ಕಲ್ಪಿಸುವ ಉದ್ದೇಶವೂ ಈ ನಿರ್ಧಾರದ ಹಿಂದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿತ್ತು. ಆದರೆ ಅವರು ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಬಯಸಿದ್ದರು ಎನ್ನಲಾಗಿದೆ.

ಇದೇ ವೇಳೆ, ಪಕ್ಷದ ಕೆಲ ವಲಯಗಳಿಂದ ವ್ಯಕ್ತವಾದ ವಿರೋಧ ಹಾಗೂ ಸಂಘಟನೆ-ಸರ್ಕಾರ ಎರಡನ್ನೂ ಒಟ್ಟಿಗೆ ನಿರ್ವಹಿಸುವ ವಿಚಾರದಲ್ಲಿ ಹೈಕಮಾಂಡ್ ಎಚ್ಚರಿಕೆಯ ನಡೆ ಅನುಸರಿಸಿದೆ ಎನ್ನಲಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂಚೂಣಿಗೆ ಬಂದಿದ್ದು, ಅಂತಿಮ ಆಯ್ಕೆ ಅವರ ಪರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸಂಘಟನೆಯ ಹೊಸ ನಾಯಕತ್ವದ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ನಿರೀಕ್ಷೆಯಿದೆ.

ಪಕ್ಷದ ಹಿರಿಯ ನಾಯಕನಾಗಿ ದೀರ್ಘಕಾಲ ಸಂಘಟನೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮುಂದಿನ ಚುನಾವಣೆಗಳು ಮತ್ತು ಸಂಘಟನೆ ಬಲವರ್ಧನೆಗೆ ಹೊಸ ತಂತ್ರ ರೂಪಿಸುವ ಜವಾಬ್ದಾರಿ ಅವರ ಹೆಗಲೇರಲಿದೆ.

- Advertisement -spot_img

More articles

- Advertisement -spot_img

Latest article