ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ಉಗ್ರ ಹೋರಾಟ: ಪ್ರತಿ ಟನ್ಗೆ ₹5,500 ಬೆಲೆ, ಸಕ್ಕರೆ MSP ₹60ಕ್ಕೆ ಹೆಚ್ಚಿಸಲು ಆಗ್ರಹ!
ಹುಬ್ಬಳ್ಳಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ (Hubballi) ರೈತರ ಹೋರಾಟ ತೀವ್ರಗೊಂಡಿದ್ದು, ಚೆನ್ನಮ್ಮ ವೃತ್ತದಲ್ಲಿ (Chennamma Circle) ಸಾವಿರಾರು ರೈತರು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರೈತ ಹೋರಾಟಗಾರ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಬೆಳಗಾವಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ 2,000ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿ ಮಾಡಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (MSP) ಹಾಲಿ ಇರುವ ₹31 ರಿಂದ ₹60ಕ್ಕೆ ಹೆಚ್ಚಿಸಬೇಕು ಹಾಗೂ ಹೊಸ ಎಫ್ಆರ್ಪಿ (FRP) ನಿಗದಿಪಡಿಸಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.
ಆರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತಾದರೂ, ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ನೆಹರು ಮೈದಾನದಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಚೆನ್ನಮ್ಮ ವೃತ್ತದಿಂದ ಪ್ರಹ್ಲಾದ್ ಜೋಶಿ ಅವರ ನಿವಾಸದತ್ತ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ನಿವಾಸದ ಬಳಿ ಧರಣಿ ಕುಳಿತರು. ಈ ವೇಳೆ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ಮುಂದೆ ಸಾಗಲು ರೈತರು ಯತ್ನಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಇಂಚಿಗೇರಿ ಮಠದ ಶಶಿಕಾಂತ ಗುರೂಜಿ ಸೇರಿದಂತೆ ಪ್ರಮುಖ ರೈತ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮಿನಾಥನ್ ಆಯೋಗದ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ ಖುದ್ದಾಗಿ ಆಗಮಿಸಿ ರೈತರ ಮನವಿ ಸ್ವೀಕರಿಸಿ ಗೌರವ ನೀಡಬೇಕು ಎಂದು ಗುರೂಜಿ ಆಗ್ರಹಿಸಿದರು.
ರೈತರು ಪ್ರಮುಖ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಹುಬ್ಬಳ್ಳಿ ನಗರದಾದ್ಯಂತ ಸಂಚಾರಕ್ಕೆ ತೀವ್ರ ಅಡ್ಡಿಯಾಯಿತು. ವಾಹನಗಳು ಕಿಲೋಮೀಟರ್ಗಟ್ಟಲೆ ಸಾಲುಗಟ್ಟಿ ನಿಂತಿದ್ದರಿಂದ ನಗರದ ವಾಹನ ಸವಾರರು ಹಾಗೂ ಸಾರ್ವಜನಿಕರು ಭಾರಿ ಪರದಾಟ ನಡೆಸಿದರು.



