ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಸಿದ್ಧತೆ! ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಚರ್ಚೆ ಎಂದ ಸಿಎಂ ಡಿಕೆಶಿ
ಬೆಂಗಳೂರು: ಕನ್ನಡಿಗರ ಹೆಮ್ಮೆಯ ಸಂಕೇತವಾಗಿರುವ ಕೆಂಪು-ಹಳದಿ ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ರೂಪಿಸುವ ಕುರಿತು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಷ್ಟ್ರಧ್ವಜದ ಗೌರವ ಹಾಗೂ ನಿಯಮಗಳಿಗೆ ಯಾವುದೇ ಧಕ್ಕೆಯಾಗದಂತೆ ಕನ್ನಡ ಬಾವುಟಕ್ಕೆ ಕಾನೂನುಬದ್ಧ ಮಾನ್ಯತೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹಾಗೂ ಸದಾಶಿವನಗರದ ನಿವಾಸ ಮತ್ತು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳನ್ನು ವಿವರಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜದ ಪಕ್ಕದಲ್ಲಿ ಕನ್ನಡ ಬಾವುಟವನ್ನು ಹಾರಿಸಿದ್ದೇನೆ. ಈ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡಲು ಸರ್ಕಾರ ಮುಂದಾಗಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ಈ ಕುರಿತು ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಅಧಿಕೃತ ಮಾನ್ಯತೆ ದೊರೆತಿಲ್ಲ. ಹೀಗಾಗಿ ಕಾನೂನುಬದ್ಧವಾಗಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡುವ ವಿಚಾರವಾಗಿ ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಮತ್ತೊಂದು ಸುತ್ತಿನ ಸಮಾಲೋಚನೆಯನ್ನೂ ನಡೆಸಲಾಗುವುದು. ರಾಷ್ಟ್ರಧ್ವಜದ ಗೌರವ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಿಕೊಂಡೇ ಕನ್ನಡ ಧ್ವಜದ ಬಳಕೆ, ಸ್ಥಾನಮಾನ ಹಾಗೂ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಈ ವಿಚಾರವನ್ನು ಮತ್ತೊಮ್ಮೆ ಸಚಿವ ಸಂಪುಟದ ಮುಂದೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಹೊಸ ಕಾನೂನು ರೂಪಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಲಿದೆ. ಮುಖ್ಯಮಂತ್ರಿ ಕಚೇರಿ ಹಾಗೂ ವಿಧಾನಸೌಧದಲ್ಲಿಯೂ ಕನ್ನಡ ಬಾವುಟ ಹಾರಿಸುವ ಕುರಿತು ಸಾರ್ವಜನಿಕರು ಮತ್ತು ಶಾಸಕರ ಅಭಿಪ್ರಾಯಗಳನ್ನು ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡುವ ವಿಚಾರವನ್ನು ಚರ್ಚೆಗೆ ತರಲಾಗುವುದು. ಶಾಸಕರ ಅಭಿಪ್ರಾಯಗಳನ್ನು ಪಡೆದು ಕಾನೂನುಬದ್ಧವಾಗಿ ಯಾವ ರೀತಿಯ ರಕ್ಷಣೆ ಒದಗಿಸಬಹುದು ಎಂಬುದನ್ನು ಪರಿಶೀಲಿಸಲಾಗುವುದು. ಅಗತ್ಯ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಬಗ್ಗೆಯೂ ಕ್ರಮ ವಹಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಕನ್ನಡ ಬಾವುಟ ಕೇವಲ ಧ್ವಜವಲ್ಲ, ಅದು ಕನ್ನಡಿಗರ ಭಾವನೆ ಮತ್ತು ಅಸ್ಮಿತೆಯ ಸಂಕೇತವಾಗಿದೆ. ಕನ್ನಡದ ಜ್ಞಾನ, ಪರಂಪರೆ, ಸಂಸ್ಕೃತಿ, ಸರ್ವಧರ್ಮ ಸಮಾನತೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಕೆಂಪು-ಹಳದಿ ಬಾವುಟಕ್ಕೆ ಗೌರವಯುತ ಸ್ಥಾನಮಾನ ನೀಡುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.
ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಹೆಗ್ಗುರುತನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ. ಕನ್ನಡಿಗರ ಭಾವನೆಗಳಿಗೆ ಗೌರವ ನೀಡುವ ಜೊತೆಗೆ ಸಂವಿಧಾನ ಮತ್ತು ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.



