No menu items!
9 C
Munich
Tuesday, September 22, 2026

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸೇರಿ ಹಲವು ವಿಚಾರಗಳ ಬಗ್ಗೆ ಸರ್ಕಾರ–ವಿಪಕ್ಷಗಳ ನಡುವೆ ಕದನ

Must read

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸೇರಿ ಹಲವು ವಿಚಾರಗಳ ಬಗ್ಗೆ ಸರ್ಕಾರ–ವಿಪಕ್ಷಗಳ ನಡುವೆ ಕದನ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಕದನಕ್ಕೆ ಮತ್ತೊಂದು ವೇದಿಕೆ ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ರಾಜ್ಯದ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಪ್ರಮುಖವಾಗಿ ಚರ್ಚೆಗೆ ಬರಲಿವೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರೆ, ಪ್ರತಿಪಕ್ಷದ ಆರೋಪಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ.
ಕಳೆದ ತಿಂಗಳು ನಡೆದ 11 ದಿನಗಳ ಮುಂಗಾರು ಅಧಿವೇಶನ ಗದ್ದಲ, ಪ್ರತಿಭಟನೆ ಹಾಗೂ ರಾಜಕೀಯ ಆರೋಪ-ಪ್ರತ್ಯಾರೋಪಗಳ ನಡುವೆಯೇ ಅಂತ್ಯಗೊಂಡಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದು ಪ್ರತಿದಿನ ಧರಣಿ ಹಾಗೂ ಪ್ರತಿಭಟನೆ ನಡೆಸಿತ್ತು. ಇದರಿಂದಾಗಿ ಹಲವು ವಿಚಾರಗಳ ಕುರಿತು ಸಮರ್ಪಕ ಚರ್ಚೆ ನಡೆಯಲು ಸಾಧ್ಯವಾಗಿರಲಿಲ್ಲ. ಬರ ಪರಿಸ್ಥಿತಿ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ಮುನ್ನವೇ ಅಧಿವೇಶನವನ್ನು ಮೂರು ದಿನ ಮುಂಚಿತವಾಗಿ ಮೊಟಕುಗೊಳಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆಯಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಜನರ ಮೇಲಾಗಬಹುದಾದ ಪರಿಣಾಮಗಳ ಕುರಿತು ಚರ್ಚಿಸಲು ಸರ್ಕಾರ ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ, ಬೆಳೆಹಾನಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿದ್ಯುತ್ ಅಭಾವದ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ. ಜಾನುವಾರುಗಳಿಗೆ ಎದುರಾಗಿರುವ ನೀರು ಮತ್ತು ಮೇವಿನ ಕೊರತೆ, ಬೆಳೆ ನಷ್ಟಕ್ಕೆ ಪರಿಹಾರ ನೀಡುವ ವಿಚಾರಗಳ ಬಗ್ಗೆಯೂ ಸದಸ್ಯರು ಸರ್ಕಾರದ ಗಮನ ಸೆಳೆಯುವ ಸಾಧ್ಯತೆಯಿದೆ. ಇದೇ ವೇಳೆ ರೈತರ ಸಾಲಮನ್ನಾ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹೇರುವ ಸಾಧ್ಯತೆಯೂ ಇದೆ.
ಇದರೊಂದಿಗೆ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ವಿಚಾರವೂ ವಿಶೇಷ ಅಧಿವೇಶನದ ಪ್ರಮುಖ ಚರ್ಚೆಯ ವಿಷಯವಾಗಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ಉಂಟಾಗಿರುವ ಆತಂಕ ಮತ್ತು ವರದಿ ಜಾರಿಯಾದರೆ ಎದುರಾಗಬಹುದಾದ ಪರಿಣಾಮಗಳ ಕುರಿತು ಸದಸ್ಯರು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಕಸ್ತೂರಿರಂಗನ್ ವರದಿ ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸುವ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ರಾಜ್ಯದ ಅಭಿಪ್ರಾಯವನ್ನು ಸಲ್ಲಿಸುವ ಸಾಧ್ಯತೆಯೂ ಇದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಮತ್ತು ಚಿಕ್ಕಮಗಳೂರು ಬಳಿಕ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಸ್ತೂರಿರಂಗನ್ ವರದಿ ಜಾರಿಯಿಂದ ಬಾಧಿತರಾಗಬಹುದಾದ ಗ್ರಾಮಸ್ಥರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಸಂವಾದ ನಡೆಸಿದ್ದಾರೆ. ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ, ‘ನಾವು ಬಿಜೆಪಿ ರೀತಿ ಭಾವನೆ ಮೇಲೆ ರಾಜಕೀಯ ಮಾಡಲ್ಲ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ‘ಭಾವನೆ ಇಲ್ಲದೇ ಜೀವನವೇ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಹೀಗಾಗಿ ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿರಂಗನ್ ವರದಿ ಸೇರಿದಂತೆ ಹಲವು ವಿಚಾರಗಳು ರಾಜಕೀಯ ಚರ್ಚೆಗೆ ವೇದಿಕೆಯಾಗುವ ಸಾಧ್ಯತೆಯಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿದ್ದು, ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ಸಜ್ಜಾಗಿದೆ. ಪರಿಣಾಮವಾಗಿ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ನಡೆಯುವ ಸಾಧ್ಯತೆಯಿದೆ.

- Advertisement -spot_img

More articles

- Advertisement -spot_img

Latest article