KPSC ನೇಮಕಾತಿ ಅಕ್ರಮದ ಬೆನ್ನಲ್ಲೇ ಐಎಎಸ್ ಅಧಿಕಾರಿ ನಾಪತ್ತೆ; ಪೊಲೀಸರಿಂದ ಶೋಧ
ಬೆಂಗಳೂರು: ಕರ್ನಾಟಕದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಜ್ಞಾನೇಂದ್ರ ಕುಮಾರ್, ಗುರುವಾರ ಬೆಳಗ್ಗೆ ತಮ್ಮ ಮೊಬೈಲ್ ಫೋನ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ದೆಹಲಿಗೆ ತೆರಳುವುದಾಗಿ ತಿಳಿಸಿ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು, ದೆಹಲಿಗೆ ಪ್ರಯಾಣಿಸಲು ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದರು ಎನ್ನಲಾಗಿದೆ. ಆದರೆ, ಜ್ಞಾನೇಂದ್ರ ಕುಮಾರ್ ವಿಮಾನ ಹತ್ತಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಟ್ರ್ಯಾಕ್ ಮಾಡಿದ್ದಾರೆ. ಬಳಿಕ ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ. ಮೊಬೈಲ್ ಫೋನ್ ಸ್ವಿಚ್‌ಆಫ್ ಆಗಿರುವ ಹಿನ್ನೆಲೆಯಲ್ಲಿ ಅವರು ದೆಹಲಿ ಕಡೆಗೆ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.ಆದರೆ, ಕುಟುಂಬಸ್ಥರ ಸಂಪರ್ಕಕ್ಕೂ ಜ್ಞಾನೇಂದ್ರ ಕುಮಾರ್ ಸಿಗದಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.ಸದ್ಯ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಕರ್ನಾಟಕ ಲೋಕಸೇವಾ ಆಯೋಗ, ಅಂದರೆ KPSCಯಲ್ಲಿ ಸೇವೆ ಸಲ್ಲಿಸಿದ್ದರು.ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಯ ಚಲನವಲನದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.ವಿಮಾನ ನಿಲ್ದಾಣದಿಂದ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಏರ್‌ಪೋರ್ಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ.ಇದರ ನಡುವೆ, ಜ್ಞಾನೇಂದ್ರ ಕುಮಾರ್ ನಾಪತ್ತೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಬೆಳವಣಿಗೆಯೂ ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಬೆಳಕಿಗೆ ಬಂದಿರುವ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ, ಅಂದರೆ ED ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಈ ಹಿಂದೆ KPSCಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ.ED ದಾಳಿ ನಡೆದ ಮರುದಿನವೇ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದರೆ, ಅವರ ನಾಪತ್ತೆಗೂ KPSC ನೇಮಕಾತಿ ಅಕ್ರಮದ ತನಿಖೆಗೂ ನೇರ ಸಂಬಂಧವಿದೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಜ್ಞಾನೇಂದ್ರ ಕುಮಾರ್ ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.



