ಅನುದಾನ ಬಾರದಿದ್ದರಿಂದ ತೀವ್ರ ಒತ್ತಡದಲ್ಲಿದ್ದೇನೆ; ಪತ್ರ ಬರೆದಿಟ್ಟು KRIDL ಎಇಇ ನಾಪತ್ತೆ, ಕುಟುಂಬಸ್ಥರಲ್ಲಿ ಆತಂಕ
ಗದಗ: ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗದಿರುವುದು ಹಾಗೂ ಸಬ್-ಗುತ್ತಿಗೆದಾರರಿಂದ ಎದುರಾಗುತ್ತಿದ್ದ ಒತ್ತಡದ ಕುರಿತು ಮೇಲಧಿಕಾರಿಗೆ ಪತ್ರ ಬರೆದಿದ್ದ KRIDL ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಫರ್ವೀಜ್ ನಾಪತ್ತೆಯಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅವರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ KRIDL ಕಾರ್ಯಪಾಲಕ ಎಂಜಿನಿಯರ್ (EE) ಅವರಿಗೆ ಸೆಪ್ಟೆಂಬರ್ 12ರಂದು ಫರ್ವೀಜ್ ಪತ್ರ ಬರೆದಿದ್ದರು ಎನ್ನಲಾಗಿದೆ. ತಮ್ಮ ಉಪವಿಭಾಗಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದಿರುವುದರಿಂದ ತೀವ್ರ ಒತ್ತಡ ಎದುರಿಸುತ್ತಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು.
ಅನುದಾನ ಬಿಡುಗಡೆಯಾಗದ ಕಾರಣ ಸಬ್-ಗುತ್ತಿಗೆದಾರರಿಗೆ ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೆಲವರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದು, ಪ್ರತಿದಿನ ಕರೆ ಮಾಡಿ ಒತ್ತಡ ಹೇರುತ್ತಿದ್ದಾರೆ ಎಂದು ಫರ್ವೀಜ್ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಈ ಎಲ್ಲ ಬೆಳವಣಿಗೆಗಳು ತಮ್ಮ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿವೆ ಎಂದು ಪತ್ರದಲ್ಲಿ ತಿಳಿಸಿರುವ ಅವರು, ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ತಮ್ಮ ಉಪವಿಭಾಗಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಬೇಕು, ಬೇರೆ ಎಇಇಯನ್ನು ನಿಯೋಜಿಸಬೇಕು ಹಾಗೂ ತಮ್ಮ ಕುಟುಂಬದವರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 12ರಂದು ಮೇಲಧಿಕಾರಿಗೆ ಪತ್ರ ಬರೆದಿದ್ದ ಫರ್ವೀಜ್, ಮರುದಿನ ಅಂದರೆ ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಸಭೆ ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ಬಳಿಕ ಅವರು ಕುಟುಂಬದ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಫರ್ವೀಜ್ ಪತ್ತೆಯಾಗದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16ರಂದು ನಾಪತ್ತೆ ಪ್ರಕರಣ ದಾಖಲಿಸಲಾಗಿದೆ. ಪತ್ನಿ, ಓರ್ವ ಮಗಳು, ತಂದೆ-ತಾಯಿ ಹಾಗೂ ಸಹೋದರರನ್ನು ಹೊಂದಿರುವ ಫರ್ವೀಜ್ ಏಕಾಏಕಿ ನಾಪತ್ತೆಯಾಗಿರುವುದು ಕುಟುಂಬಸ್ಥರ ಆತಂಕ ಹೆಚ್ಚಿಸಿದೆ.
ಪ್ರಕರಣ ಸಂಬಂಧ ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫರ್ವೀಜ್ ಅವರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.
ಫರ್ವೀಜ್ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿನ ಅಂಶಗಳು, ಅವರು ಕೊನೆಯದಾಗಿ ತೆರಳಿದ್ದ ಸ್ಥಳ, ಮೊಬೈಲ್ ಸಂಪರ್ಕ ಹಾಗೂ ಇತರ ಮಾಹಿತಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅವರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಪತ್ತೆಹಚ್ಚುವಂತೆ ಕುಟುಂಬಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.



