ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ! ತಮಿಳುನಾಡಿನ ವಿರೋಧಕ್ಕೆ ಡಿ.ಕೆ. ಶಿವಕುಮಾರ್ ಕೊಟ್ಟ ಉತ್ತರವೇನು?

Must read

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ! ತಮಿಳುನಾಡಿನ ವಿರೋಧಕ್ಕೆ ಡಿ.ಕೆ. ಶಿವಕುಮಾರ್ ಕೊಟ್ಟ ಉತ್ತರವೇನು?

ಬೆಂಗಳೂರು: ಮೇಕೆದಾಟು ಜಲಾಶಯ ಯೋಜನೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಯೋಜನೆಗೆ ಅಂತಿಮ ಅನುಮತಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿರುವ ಬೆನ್ನಲ್ಲೇ ತಮಿಳುನಾಡು ಕಾಂಗ್ರೆಸ್ನಿಂದ ವಿರೋಧ ವ್ಯಕ್ತವಾಗಿದೆ. ಇದೀಗ ಇದೇ ವಿಚಾರ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ನಾಟಕವಾಡುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದು, ಇದಕ್ಕೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ!
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಮುಂದಿಟ್ಟುಕೊಂಡು ಆರ್. ಅಶೋಕ್ ರಾಜ್ಯ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ನಾಯಕರು ಯೋಜನೆಯ ಹೆಸರಿನಲ್ಲಿ ಕೇವಲ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರೇ ಮೇಕೆದಾಟು ಯೋಜನೆ ಕಾನೂನುಬಾಹಿರ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಕರ್ನಾಟಕದ ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿಗೆ ಆರ್. ಅಶೋಕ್ ಸವಾಲು!
ಮೇಕೆದಾಟು ವಿಚಾರವಾಗಿ ರಾಹುಲ್ ಗಾಂಧಿ ವಿರುದ್ಧವೂ ಅಶೋಕ್ ವ್ಯಂಗ್ಯವಾಡಿದ್ದಾರೆ. ಅಂಡಮಾನ್ಗೆ ತೆರಳಿ ಮರಗಳನ್ನು ಅಪ್ಪಿಕೊಳ್ಳುವ ರಾಹುಲ್ ಗಾಂಧಿ, ಒಮ್ಮೆ ಕರ್ನಾಟಕದ ಮೇಕೆದಾಟು ಪ್ರದೇಶಕ್ಕೂ ಬಂದು ಅದನ್ನು ತಬ್ಬಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಜನರನ್ನು ದಿಕ್ಕುತಪ್ಪಿಸುತ್ತಿದೆ. ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಅಶೋಕ್, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕೇಂದ್ರದ ಮುಂದೆ ಸಮರ್ಪಕವಾಗಿ ಬೇಡಿಕೆ ಮಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅರಣ್ಯ ನಾಶದ ಬಗ್ಗೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿರುವುದರಿಂದ ಕೇಂದ್ರ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಹೀಗಾಗಿ ಯೋಜನೆಗೆ ಸಂಬಂಧಿಸಿದ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ಕೇಂದ್ರ ಸರ್ಕಾರದ ಮನವೊಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಅಶೋಕ್ ಸಲಹೆ ನೀಡಿದ್ದಾರೆ.
ತಮಿಳುನಾಡು ಕಾಂಗ್ರೆಸ್ ವಿರೋಧಕ್ಕೆ ಡಿಕೆಶಿ ಪ್ರತಿಕ್ರಿಯೆ!
ಇನ್ನೊಂದೆಡೆ ತಮಿಳುನಾಡು ಕಾಂಗ್ರೆಸ್ನ ವಿರೋಧದ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಮೇಕೆದಾಟು ಯೋಜನೆ ವಿಚಾರವನ್ನು ಈಗಾಗಲೇ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪಿಸಲಾಗಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗಮನಿಸುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನ ನಾಯಕರು ಯೋಜನೆಯನ್ನು ವಿರೋಧಿಸಬಹುದು. ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಅವರಿಗಿದೆ ಎಂದು ಹೇಳಿದ್ದಾರೆ.
ವಿರೋಧಿಸಿದರೂ ನಮ್ಮ ಕೆಲಸ ನಿಲ್ಲಲ್ಲ ಎಂದ ಡಿಕೆಶಿ!
ತಮಿಳುನಾಡಿನ ಚೆನ್ನೈನಲ್ಲಿ ದೊಡ್ಡ ಕಾನೂನು ತಜ್ಞರ ತಂಡವಿದೆ. ಅವರು ಕೂಡ ಯೋಜನೆಗೆ ಸಂಬಂಧಿಸಿದ ಕಾನೂನು ವಿಚಾರಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಯೋಜನೆಗೆ ಯಾರೇ ವಿರೋಧ ವ್ಯಕ್ತಪಡಿಸಿದರೂ ಅವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುವುದಿಲ್ಲ. ಆದರೆ ಮೇಕೆದಾಟು ಯೋಜನೆ ಜಾರಿಗೆ ಕರ್ನಾಟಕ ಸರ್ಕಾರ ಮಾಡಬೇಕಾದ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article