MRPL ಘಟಕದಲ್ಲಿ ಭೀಕರ ಸ್ಫೋಟ; ಎಲೆಕ್ಟ್ರಿಷಿಯನ್ ಮನೀಶ್ ಸಾವು, ಹಲವರಿಗೆ ಗಾಯ
ಮಂಗಳೂರು: ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. MRPLನ CHT ಘಟಕದಲ್ಲಿ ಘಟನೆ ನಡೆದಿದ್ದು, ಸ್ಫೋಟದ ಬಳಿಕ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಸ್ಫೋಟದ ಬೆನ್ನಲ್ಲೇ ಘಟಕ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಘಟನೆಯ ತೀವ್ರತೆಗೆ MRPL ಸಮೀಪದಲ್ಲಿರುವ ಅಂಗನವಾಡಿಯ ಕಿಟಕಿ ಗಾಜು ಹಾಗೂ ಗೋಡೆಗೆ ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಯಲ್ಲಿದ್ದ ಮಕ್ಕಳನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲಿದ್ದ 30 ವರ್ಷದ ಮನೀಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹೊರವಲಯದ ಹಳೆಯಂಗಡಿ ನಿವಾಸಿಯಾಗಿದ್ದ ಮನೀಶ್, MRPL ಘಟಕದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ಘಟನೆ ವೇಳೆ ಮನೀಶ್ ಹಾಗೂ ರಾಜೇಶ್ ಬ್ಯಾಪ್ಟಿಸ್ಟ್ ಸ್ಥಳದಲ್ಲಿದ್ದರು ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೀಶ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು ಶೇ.35ರಷ್ಟು ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಇತರ ಗಾಯಾಳುಗಳಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಚೇರಿ ಭಾಗದಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳ ನಿಖರ ಸಂಖ್ಯೆಯ ಕುರಿತು ಅಧಿಕೃತ ಮಾಹಿತಿ ಇನ್ನಷ್ಟು ಸ್ಪಷ್ಟವಾಗಬೇಕಿದೆ.



