No menu items!
20.1 C
Munich
Monday, July 6, 2026

ಮುಂಬೈನಲ್ಲಿ ಮುಂಗಾರು ಅಬ್ಬರ: ಒಂದೇ ದಿನ 8 ಸಾವು, ಭೂಕುಸಿತದಿಂದ ರೈಲು-ರಸ್ತೆ ಸಂಚಾರ ಅಸ್ತವ್ಯಸ್ತ

Must read

ಮುಂಬೈನಲ್ಲಿ ಮುಂಗಾರು ಅಬ್ಬರ: ಒಂದೇ ದಿನ 8 ಸಾವು, ಭೂಕುಸಿತದಿಂದ ರೈಲು-ರಸ್ತೆ ಸಂಚಾರ ಅಸ್ತವ್ಯಸ್ತ

ಮುಂಬೈ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಳೆಯ ಅಬ್ಬರ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ನಗರದ ವಿವಿಧೆಡೆ ಸಂಭವಿಸಿದ ಅವಘಡಗಳಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮುಂಬೈನ ಮಂಖುರ್ಡ್ ಪ್ರದೇಶದಲ್ಲಿ ಚಾಲ್ ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮರ ಬಿದ್ದು ಒಬ್ಬರು ಸಾವನ್ನಪ್ಪಿದರೆ, ಕಟ್ಟಡದ ಗ್ರಿಲ್ ಪಾದಚಾರಿ ಮಾರ್ಗದ ಮೇಲೆ ಕುಸಿದ ಪರಿಣಾಮ ಮತ್ತೊಬ್ಬರು ಮೃತಪಟ್ಟಿದ್ದಾರೆ.
ಸೋಮವಾರವೂ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈಲು ಮತ್ತು ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮುಂಬೈ–ಪುಣೆ ಎಕ್ಸ್ಪ್ರೆಸ್ವೇನಲ್ಲಿ ಭಾರೀ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಮುಂಬೈ ಮತ್ತು ಪುಣೆ ನಡುವಿನ ಸಂಪರ್ಕಕ್ಕೂ ಅಡಚಣೆ ಉಂಟಾಗಿದೆ.
ಭಾರೀ ಮಳೆಯ ಪರಿಣಾಮ ನಗರಕ್ಕೆ ಸಂಪರ್ಕ ಕಲ್ಪಿಸುವ 16 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದ್ದು, ಒಂಬತ್ತು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಇಂದು ಬೆಳಗಿನ ಜಾವ ಸುಮಾರು 3.05ರ ವೇಳೆಗೆ ಕರ್ಜತ್–ಲೋನಾವಾಲ ನಡುವಿನ ಭೋರ್ ಘಾಟ್ ವಿಭಾಗದ ಠಾಕೂರ್ವಾಡಿ ಬಳಿ ಭೂಕುಸಿತ ಸಂಭವಿಸಿದೆ. ಬಳಿಕ ಖಂಡಾಲಾ ಮತ್ತು ಮಂಕಿ ಹಿಲ್ ನಡುವೆಯೂ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಭೋರ್ ಘಾಟ್ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಅಪ್ ಲೈನ್, ಡೌನ್ ಲೈನ್ ಹಾಗೂ ಮಧ್ಯ ರೈಲು ಮಾರ್ಗಗಳ ಮೇಲೂ ಭೂಕುಸಿತ ಉಂಟಾಗಿದೆ. ವಿಶೇಷವಾಗಿ ಕರ್ಜತ್ ಮತ್ತು ಲೋನಾವಾಲ ನಡುವಿನ ಆಗ್ನೇಯ ಘಾಟ್ ವಿಭಾಗದಲ್ಲಿ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ರೈಲ್ವೆ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕೆಲವು ದೂರದ ರೈಲು ಸೇವೆಗಳನ್ನು ರದ್ದುಪಡಿಸಿದೆ. ಉಳಿದ ರೈಲುಗಳನ್ನು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.

- Advertisement -spot_img

More articles

- Advertisement -spot_img

Latest article