ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ; ನೀಟ್ ಅಕ್ರಮಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಹರಿಪ್ರಸಾದ್ ಕಿಡಿ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು 2026ರ ಮಹಾ ಹಗರಣವಾಗಿದ್ದು, ಭಾರತದ ಇತಿಹಾಸದಲ್ಲೇ ಅತಿದೊಡ್ಡ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಹಗರಣದಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹತ್ತು ವರ್ಷಗಳಲ್ಲಿ 40ಕ್ಕೂ ಹೆಚ್ಚು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಅವರು, ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವೈಫಲ್ಯ ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.
“ಕಪ್ಪು ಹಣವನ್ನು ಹೊರತೆಗೆದು ತರುತ್ತೇವೆ ಎಂದು ಹೇಳಿದ್ದ ಪ್ರಧಾನಿ ಮೋದಿ, ಈಗ ಕಪ್ಪು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ದಂಧೆಯನ್ನು ತಡೆಯಬೇಕು” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.
2019ರಲ್ಲಿ ಶ್ರೀಮಂತರ ಪರವಾಗಿ ಪರೀಕ್ಷೆ ಬರೆಯುವಂತಹ ಪ್ರಕರಣಗಳು ನಡೆದಿದ್ದನ್ನು ದೇಶ ಕಂಡಿದೆ ಎಂದು ಹೇಳಿದ ಅವರು, ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜ್ಯೋತಿಷಿಯನ್ನು ಓಎಸ್ಡಿ ಆಗಿ ನೇಮಕ ಮಾಡಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಬಿಜೆಪಿಯವರೂ ತಮ್ಮ ನಂಬಿಕೆಯವರನ್ನೇ ಪ್ರಮುಖ ಹುದ್ದೆಗಳಿಗೆ ನೇಮಿಸಿಕೊಂಡಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ವಿಜಯ್ ಕೂಡ ತಮ್ಮ ನಂಬಿಕೆ ಮತ್ತು ಅನುಕೂಲಕ್ಕೆ ತಕ್ಕಂತೆ ನೇಮಕ ಮಾಡಿದ್ದಾರೆ” ಎಂದು ಹೇಳಿದರು.



